ರಾಯಚೂರು,ಜೂ.28: ಡೆಂಗಿ ಜ್ವರ ನಿಯಂತ್ರಣಕ್ಕೆ ಸಂಬ0ಧಿಸಿದ0ತೆ ಪ್ರತಿ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜೂನ್.28 ರ ಶುಕ್ರವಾರ ದಂದು ನಗರದ ಪಿ.ಎನ್.ಟಿ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಚಾಲನೆ ನೀಡದರು.
ಈ ವೇಳೆ ಮಾತನಾಡಿದ ಅವರು, ಜೂನ್ 28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ನೀಡಿದ್ದು, ಅದರಂತೆ ರಾಯಚೂರು ಜಿಲ್ಲೆಯಲ್ಲಿಯು ಸಹ ಈ ಕಾರ್ಯಕ್ರಮಕ್ಕೆ ನೀಡಿದ್ದೇವೆ. ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗಿದ್ದು, ಪ್ರಸಕ್ತ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ರೋಗ ಪ್ರಸರಣವು ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದರು.
ವಾಡಿಕೆಯಂತೆ ಏಪ್ರಿಲ್–ಮೇ ಮಾಹೆಯಿಂದಲೂ ಡೆಂಗಿ ಜ್ವರ ನಿಯಂತ್ರಣ ಕ್ರಮಗಳನ್ನು ಆರೋಗ್ಯ ಇಲಾಖೆಯು ಆದ್ಯತೆಯ ಮೇಲೆ ಅನುಷ್ಠಾನಗೊಳಿಸುತ್ತಿದ್ದರು. ಸಹ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಪೂರ್ಣ ಸಹಕಾರವಿಲ್ಲದೆ, ಡೆಂಗಿ ಜ್ವರ ನಿಯಂತ್ರಣ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರು ಸ್ವತಃ ತಮ್ಮ ಮನೆಗಳು, ಕಚೇರಿಗಳು, ಶಾಲಾ–ಕಾಲೇಜುಗಳು, ಇತ್ಯಾದಿಗಳಲ್ಲಿ ನೀರು ತುಂಬುವ ಪರಿಕರಗಳನ್ನು (ಸಿಮೆಂಟ್ ತೊಟ್ಟಿ, ಡ್ರಂ, ಬ್ಯಾರೆಲ್, ಇತ್ಯಾದಿ) ಸ್ವಚ್ಛಗೊಳಿಸುವುದು, ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡುವುದರ ಮೂಲಕ, ಡೆಂಗಿ ಜ್ವರ ನಿಯಂತ್ರಣ ಕ್ರಮದಲ್ಲಿ ಅತಿ ಮುಖ್ಯವಾದ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣ ನಾಶ ಚಟುವಟಿಕೆಯನ್ನು ನಡೆಸುವುದರ ಮೂಲಕ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಿ ಡೆಂಗಿ ಜ್ವರದಿಂದ ಪಾರಾಗಬಹುದು ಎಂದರು.
2024ನೇ ಸಾಲಿನ ರಾಷ್ಟ್ರೀಯ ಡೆಂಗಿ ದಿನ (16ನೇ ಮೇ 2024) ಹಾಗೂ ಜುಲೈ ತಿಂಗಳಿನಲ್ಲಿ ಆಚರಿಸಲ್ಪಡುವ ಡೆಂಗಿ ವಿರೋಧ ಮಾಸಾಚರಣೆಯ ಧ್ಯೇಯವಾಕ್ಯವು ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ ಎಂಬುದಾಗಿದೆ. ಈ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ಸಾರ್ವಜನಿಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.
ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವುದನ್ನು ಸಾರ್ವಜನಿಕರ ದಿನಚರಿಯ ದೈನಂದಿನ ಅಭ್ಯಾಸ ಅಥವಾ ಪದ್ಧತಿಯನ್ನಾಗಿ ಮಾಡುವುದರ ಮೂಲಕ ವರ್ತನೆಯಲ್ಲಿ ಶಾಶ್ವತ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಈ ಚಟುವಟಿಕೆಯನ್ನು ಅಭಿಯಾನದಂತೆ ಅನುಷ್ಠಾನಗೊಳಿಸಲು ಸೂಚಿಸಿದ್ದು, ಇದರಿಂದ ಡೆಂಗಿ ಜ್ವರ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಯೋಧರಾಗುತ್ತಾರೆ ಎಂದು ಹೇಳಿದರು.
ಡೆಂಗಿ ಜ್ವರ ಪ್ರಸರಣದ ಅವಧಿಯನ್ನು ಪರಿಗಣಿಸಿ ಸಾರ್ವಜನಿಕರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ನಡೆಸುವ ಈ ಚಟುವಟಿಕೆಯನ್ನು ಎಲ್ಲಾ ಹಂತಗಳಲ್ಲೂ ಸಮರೋಪಾದಿಯಲ್ಲಿ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಸರ್ವಕ್ಷಣಾಧಿಕಾರಿ ಡಾ.ಗಣೇಶ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿ ಪ್ರಜ್ವಲ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಇದ್ದರು.