ರಾಯಚೂರು,ಜ.11: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು ಜಿಲ್ಲಾ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜನವರಿ 09ರಂದು ನಡೆಯಿತು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಕೆ.ವಿ.ಸುರೇಂದ್ರಕುಮಾರ್ ಅವರು ಮಾತನಾಡಿ, ಗ್ರಾಹಕರು ತಮಗಿರುವ ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಗ್ರಾಹಕರಿಗೆ ಸಂಬಂಧಿಸಿದ ಕಾನೂನುಗಳು ಜಾರಿಯಾದ ಮೇಲೆ ವಂಚನೆಗಳಿಗೆ ಕಡಿವಾಣ ಹಾಕಲು ಸಾಧ್ಯವಾಯಿತು ಎಂದು ತಿಳಿಸಿದರು.
ಪ್ರತಿಯೊಬ್ಬ ಗ್ರಾಹಕರಿಗೂ ಕಾನೂನಿನ ಅರಿವು ಇರಬೇಕು. ಮತ್ತು ಮಾನವೀಯ ಮೌಲ್ಯಗಳೊಂದಿಗೆ ಜೀವಿಸಬೇಕು ಎಂದು ಸಲಹೆ ಮಾಡಿದರು.
ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಮಾತನಾಡಿ, ಗ್ರಾಹಕರು ಮಾಡುವಂತ ಅನೇಕ ವ್ಯವಹಾರಗಳ ಪೈಕಿ ಕೆಲವೊಂದು ವ್ಯವಹಾರಗಳಲ್ಲಿ ಆಗುವ ಅನ್ಯಾಯದಿಂದ ಪಾರಾಗಲು ಕಾನೂನು ಜಾಗೃತಿ ಅಗತ್ಯ ಎಂದು ಸಲಹೆ ಮಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಯಂಕಣ್ಣ ಅವರು ಮಾತನಾಡಿ, ಗ್ರಾಹಕರು ಕೊಳ್ಳುವ ಸರಕುಗಳಿಗೆ ತಪ್ಪದೇ ಬಿಲ್ಲಗಳನ್ನು ಪಡೆದು ವ್ಯವಹರಿಸುವುದು ಸೂಕ್ತ ಎಂದು ಹೇಳಿದರು.
ಸಮಾರಂಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.