ಬೀದರ, ಆ. ೧೬ : ಗ್ಯಾರಂಟಿ ಯೋಜನೆಗಳ ಲಾಭ ಇನ್ನು ಯಾರಿಗೆ ಸಿಕ್ಕಿಲ್ಲ ಅಂಥಹ ಎಲ್ಲಾ ಜನರಿಗೆ ಈ ಯೋಜನೆಗಳ ಲಾಭ ತಲುಪಿಸುವ ಕೆಲಸ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮತ್ತು ತಾಲ್ಲೂಕ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮಾಡಬೇಕು ಎಂದು ಅರಣ್ಯ. ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಶುಕ್ರವಾರ ಬೀದರ ಜಿಲ್ಲಾ ಪಂಚಾಯತನಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕಾರ್ಯಾಲಯಗಳ ಉದ್ಘಾಟನೆ ಹಾಗೂ ಜಿಲ್ಲಾ ಪಂಚಾಯತ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕಾರ್ಯಾಲಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಡ ಜನರಿಗೆ ಅವರ ಮೂಲಭೂತ ಅವಶ್ಯಕತೆಗಳಾದ ಅನ್ನ. ವಸತಿ. ಬಟ್ಟೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಕೊಡುವ ಜವಾಬ್ದಾರಿ ಇದೆ. ಜನರು ಗ್ಯಾರಂಟಿ ಯೋಜನೆಗಳು ಮುಂದುವರಿಯುವದಿಲ್ಲ ಎಂದು ಮಾತನಾಡುತ್ತಾರೆ ಆದರೆ ಯಾವುದೇ ಕಾರಣಕ್ಕೆ ಅವು ನಿಲ್ಲುವುದಿಲ್ಲ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳು ಎಲ್ಲಾ ಜನರಿಗೆ ತಲುಪಬೇಕು ಎಂಬ ಕಾರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ರಾಜ್ಯದ ಒಂದು ಕೋಟಿ ಇಪ್ಪತ್ತು ಲಕ್ಷ ಮಹಿಳೆಯರು ಪಡೆಯುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಅಂದಾಜು ಮೂರು ಲಕ್ಷ ಇಪ್ಪತ್ತ ಮೂರು ಸಾವಿರ ಮಹಿಳೆಯರು ಇದರ ಲಾಭ ಪಡೆಯುತ್ತಿದ್ದು ಅವರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೇರ ವರ್ಗಾವಣೆ ಮೂಲಕ ಅವರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ ಎಂದರು.
ಶಕ್ತಿ ಯೋಜನೆ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ನಾನು ಧರ್ಮಸ್ಥಳಕ್ಕೆ ಹೋದಾಗ ಮಳಚಾಪುರದ ಮಹಿಳೆಯರು ಭೇಟಿ ಆಗಿದ್ದರು. ನಿಮ್ಮ ಸರಕಾರ ಉಚಿತವಾಗಿ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣ ಮಾಡಲು ಅವಕಾಶ ಮಾಡಿದ್ದಕ್ಕಾಗಿ ಇಲ್ಲಿಗೆ ಬರುವ ನಮ್ಮ ಬಹುದಿನಗಳ ಕನಸು ನನಸಾಗಿದೆ ಎಂದು ಹೇಳಿದರು ಎಂದರು.
ರಾಜ್ಯದ ನಾಲ್ಕು ಕೋಟಿ ಜನರು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿದ್ದಾರೆ ರಾಜ್ಯದಲ್ಲಿ ಯಾರು ಹಸಿವಿನಿಂದ ಬಳಲಬಾರದು ಎನ್ನುವ ಕಾರಣಕ್ಕಾಗಿ ಈ ಯೋಜನೆ ಜಾರಿಗೆ ತಲಾಗಿದೆ. ಗೃಹ ಜ್ಯೋತಿ ಅಡಿ ೨೦೦ ಯುನಿಟಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಇದರ ಲಾಭ ಸಿಗುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ೩ ಲಕ್ಷ ೬೦ ಸಾವಿರ ಜನರು ಇದರ ಲಾಭ ಪಡೆಯುತ್ತಿದ್ದಾರೆ. ಯುವ ನಿಧಿ ಯೋಜನೆಯ ಲಾಭ ನಮ್ಮ ಜಿಲ್ಲೆಯಲ್ಲಿ ೭ ಸಾವಿರ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಎಂದು ಹೇಳಿದರು.
ಅರ್ಹರಿದ್ದವರಿಗೆ ಮತ್ತು ಬಿಟ್ಟು ಹೋದವರಿಗೂ ಈ ಯೋಜನೆಗಳ ಲಾಭ ಸಿಗಬೇಕಿದೆ. ಹಳ್ಳಿಗಳ ಉದ್ದಾರ ಆದರೆ ಮಾತ್ರ ದೇಶದ ಉದ್ದಾರ ಎಂದು ನಮ್ಮ ರಾಷ್ಟçಪಿತ ಗಾಂಧೀಜಿಯವರು ಹೇಳಿದ್ದರು. ಹಿಂದೆ ಪಂಚಾಯತಿಗಳಿಗೆ ಅನುದಾನ ಬರುತ್ತಿರಲಿಲ್ಲ ಇಂದು ಲಕ್ಷ್ಯಾಂತರ ರೂಪಾಯಿ ಅನುದಾನ ಬರುತ್ತಿದ್ದು ಅದು ಸಮರ್ಪಕವಾಗಿ ಬಳಕೆಯಾಗಬೇಕು. ಇಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕಾರ್ಯಾಲಯ ಹಾಗೂ ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕಾರ್ಯಾಲಯಗಳ ಉದ್ಘಾಟನೆ ಮಾಡಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಮಾತನಾಡಿ ಸರ್ಕಾರದ ಕೆಲಸ ದೇವರ ಕೆಲಸ ಜನ ಸೇವೆಯೆ ಜನಾರ್ದನ ಸೇವೆ. ಮಹಿಳೆಯರ ಕಷ್ಟ ಅರ್ಥಮಾಡಿಕೊಂಡ ನಮ್ಮ ಸರ್ಕಾರ ಅವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲರೂ ಸೇರಿ ನಮ್ಮ ಕೈಲಾದಷ್ಟು ಜನರಿಗೆ ಅನುಕೂಲವಾಗುವ ಕೆಲಸ ಮಾಡೋಣ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಅವರು ಮಾತನಾಡಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕಾರ್ಯಾಲಯ ಹಾಗೂ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಕಾರ್ಯಾಲಯಗಳ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಿದ್ದಾರೆ. ಕರ್ನಾಟಕ ಸರ್ಕಾರ ಜಾರಿಗೆ ತಂದ ೫ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಸಮಿತಿಗಳನ್ನು ರಚಿಸಲಾಗಿದೆ ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ೮ ಜನರಿಗೆ ಬಿ.ಎಫ್.ಟಿ ಪ್ರಮಾಣ ಪತ್ರಗಳು ಹಾಗೂ ೨೧ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಕಂಪ್ಯೂಟರ್ ಹಾಗೂ ಮೊಬೈಲ್ ಪೋನ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾAತ ಪೂಜಾರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಲತಾ ಹಾರಕೂಡೆ, ಮಾರುತಿ ಬಂಗಾರೆ ಸೇರಿದಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಜಿಲ್ಲಾ ಪಂಚಾಯತಿ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಜನರಿಗೆ ತಲುಪಿಸುವ ಕೆಲಸ ಮಾಡಬೇಕು -ಸಚಿವ ಈಶ್ವರ ಖಂಡ್ರೆ
WhatsApp Group
Join Now