ಕೊಪ್ಪಳ ಸೆ 20 :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳಿಂದ ಅಕ್ಟೋಬರ್ ೨ರಂದು ನಡೆಯಲಿರುವ ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಬೇರೆ ಬೇರೆ ದಿನಗಳಿಂದ ನಿಗದಿಪಡಿಸಿರುವ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆ.೨೦ರಂದು ನಡೆದ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶ್ರಮದಾನ, ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಪ್ರಿಯ ಭಜನೆಗಳು, ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ ಮತ್ತಿತರ ವಿಷಯ ಕುರಿತು ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ವಿದ್ಯಾರ್ಥಿ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು ಸ್ವಾತಂತ್ರö್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪಿಯು ಮತ್ತು ಪದವಿ -ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ ೨ರಂದು ಬಹುಮಾನ ವಿತರಣೆಗೆ ಅಗತ್ಯ ಏರ್ಪಾಡು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಮಹಾತ್ಮ ಗಾಂಧೀಜಿಯವರು ಶ್ರಮದಾನಕ್ಕೆ ವಿಶೇಷ ಒತ್ತು ನೀಡಿದ್ದರು. ಈ ನಿಟ್ಟಿನಲ್ಲಿ ಜನತೆಗೆ ಉತ್ತಮ ಸಂದೇಶ ಹೋಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ವಿಶೇಷವಾಗಿ ರೂಪಿಸಬೇಕು. ಈ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ವಸತಿ ನಿಲಯಗಳ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಅಗತ್ಯ ಏರ್ಪಾಡು ಮಾಡಬೇಕು ಎಂದು ಸೂಚನೆ ನೀಡಿದರು.
ಮಹಾತ್ಮ ಗಾಂಧೀಜಿಯವರು ಖಾದಿ ಮತ್ತು ಸ್ವದೇಶಿ ವಸ್ತುಗಳ ಬಳಕೆಯ ಬಗ್ಗೆ ವಿಶೇಷ ಸಂದೇಶ ನೀಡಿದ್ದಾರೆ. ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಜನತೆಗೆ ವಿಶೇಷ ಸಂದೇಶ ರವಾನೆಯಾಗುವ ಹಾಗೆ ಅಕ್ಟೋಬರ್ ೨ರಂದು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ಖಾದಿ ಬಟ್ಟೆ ಧರಿಸಬೇಕು. ಖಾದಿ ಮತ್ತು ಸ್ವದೇಶಿ ವಸ್ತುಗಳ ಬಳಕೆಯ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮತ್ತು ಕಾಲ್ನಡಿಗೆ ನಡೆಸಿ ಖಾದಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಬೇಕು ಎಂದು ಸೂಚನೆ ನೀಡಿದರು.
ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ನೈರ್ಮಲ್ಯದ ಬಗ್ಗೆ ಅರಿವು, ಅಸ್ಪೃಶ್ಯತೆ ನಿವಾರಣೆ ಜಾಗೃತಿ ಹಾಗೂ ಮದ್ಯಪಾನ ತಡೆ ಜಾಗೃತಿಗಾಗಿ ಗ್ರಾಮವೊಂದರಲ್ಲಿ ವಿಶೇಷ ಕಾರ್ಯಕ್ರಮವನ್ನು ರೂಪಿಸಲು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಾತನಾಡಿ, ಅಕ್ಟೋಬರ್ ೨ರಂದು ನಡೆಯುವ ಮಹಾತ್ಮ ಗಾಂಧೀಜಿ ಜಯಂತ್ಯುತ್ಸವ ಕಾರ್ಯಕ್ರಮಕ್ಖಾಗಿ ವಹಿಸಿದ ಜವಾಬ್ದಾರಿಯನ್ನು ಆಯಾ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ನಿರ್ವಹಣೆ ಮಾಡಬೇಕು. ಎಲ್ಲ ಕಾರ್ಯಕ್ರಮಗಳು ನಿಗದಿಪಡಿಸಿದ ದಿನದಂದು ನಡೆಯಬೇಕು. ವೇದಿಕೆಯ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆಯಬೇಕು. ಶಿಷ್ಠಾಚಾರ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿ, ಮಹಾತ್ಮ ಗಾಂಧೀಜಿ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿAದ ನಾನಾ ಕಾರ್ಯಕ್ರಮಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿದೆ. ವಿಜೇತರಿಗೆ ವೇದಿಕೆಯ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಅವರಿಗೆ ನಗದು ಬಹುಮಾನ ನೀಡಿ ಜಿಲ್ಲಾಡಳಿತದಿಂದ ಗೌರವಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಹಿರೇಗೌಡರ, ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ಎಸ್.ಸುಂದರರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮಾರಬನಹಳ್ಳಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ ಕೋಕರೆ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ನಾಗರಾಜ, ಜಿಲ್ಲಾ ವಾಲ್ಮೀಕಿ ಅಭಿವೃದ್ಧಿ ನಿಗಮದ ಮ್ಯಾನೇಜರ್ ಎಂ.ಎಸ್.ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.